ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರು, ತಮಗೆ ವಿಧಿಸಲಾದ ಶಿಕ್ಷೆಯನ್ನು ಪ್ರಶ್ನಿಸಿ ಮತ್ತು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಇಂದು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಜೀವಾವಧಿ ಶಿಕ್ಷೆ ಮತ್ತು ಕನ್ವಿಕ್ಷನ್ ಆದೇಶವನ್ನು ಪ್ರಶ್ನಿಸಿರುವ ವಿನಯ್ ಕುಲಕರ್ಣಿ, ತಕ್ಷಣವೇ ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಮತ್ತು ಜಾಮೀನು ಮಂಜೂರು ಮಾಡಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಕಾನೂನಿನ ಪ್ರಕಾರ ಶಿಕ್ಷೆಯ ತೀರ್ಪು ಪ್ರಕಟವಾದ 90 ದಿನಗಳೊಳಗೆ ಅದಕ್ಕೆ ತಡೆಯಾಜ್ಞೆ ಸಿಗದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಇರುವುದರಿಂದ, ವಿನಯ್ ಕುಲಕರ್ಣಿ ಅವರು ತುರ್ತಾಗಿ ಈ ಮೇಲ್ಮನವಿ ಸಲ್ಲಿಸಿದ್ದಾರೆ.
ಈಗಾಗಲೇ ಸಲ್ಲಿಕೆಯಾಗಿರುವ ಈ ಅರ್ಜಿಯ ವಿಚಾರಣೆಯು ಮುಂದಿನ ವಾರ ನಡೆಯುವ ಸಾಧ್ಯತೆಯಿದೆ. ಈ ವೇಳೆ ನ್ಯಾಯಾಲಯವು ಸಿಬಿಐ ಪರ ವಾದವನ್ನೂ ಆಲಿಸಲಿದೆ.
2016ರ ಜೂನ್ ನಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. ಇತ್ತೀಚೆಗೆ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಪ್ರಸ್ತುತ ವಿನಯ್ ಕುಲಕರ್ಣಿ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಹೈಕೋರ್ಟ್ ನೀಡಲಿರುವ ತೀರ್ಪಿನ ಮೇಲೆ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


